ನವದೆಹಲಿ, ಮೇ 15 (DaijiworldNews/DB): ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.
ಉದಯಪುರದಲ್ಲಿ ನಡೆಯುತ್ತಿರುವ ಚಿಂತನ-ಮಂಥನ ಅಧಿವೇಶನದಲ್ಲಿ ಈ ನಿರ್ಧಾರ ಮಾಡಲಾಗಿದ್ದು, ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷಾಂತ್ಯಕ್ಕೆ ಪಾದಯಾತ್ರೆ ಆರಂಭವಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತದೆ. ಪ್ರತಿ ರಾಜ್ಯದಲ್ಲಿಯೂ ಒಂದೇ ಮಾದರಿಯಲ್ಲಿ ನಡೆಯಲಿದೆ. ಸಿಡಬ್ಲ್ಯೂಸಿ ಇದರ ಹೊಣೆ ವಹಿಸಲಿದ್ದಾರೆ, ಇದಲ್ಲದೆ ಸಾಮೂಹಿಕ ಆಂದೋಲನದ ಬಗ್ಗೆಯೂ ಅಧಿವೇಶನದಲ್ಲಿ ಚರ್ಚೆ ನಡೆದಿದ್ದು, ಹಣದುಬ್ಬರ, ಆರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.