ಮಡಿಕೇರಿ, ಮೇ 19 (DaijiworldNews/SM): ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಾಯಿ ಶಂಕರ ಶಾಲೆಯಲ್ಲಿ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಬಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ಮಾಡಲಾಗಿದೆ ಎಂದು ವಿವಾದ ಸೃಷ್ಠಿಯಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಶಾಲಾ ಆವರಣದಲ್ಲಿ ಯಾವುದೇ ತರಬೇತಿಯನ್ನು ನೀಡಿಲ್ಲ. ಕೆಲವರು ರಾಜಕೀಯ ಲಾಭಕ್ಕಾಗಿ ಅನಗತ್ಯ ವಿವಾದದ ಜೊತೆಗೆ ಪ್ರಚಾರ ನಡೆಸುತ್ತಿದ್ದಾರೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಇದ್ದ ಕಾರಣ ಸಂಸ್ಥೆಯಲ್ಲಿ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿತ್ತು. ಈ ತರಬೇತಿಯಲ್ಲಿ ಯಾವುದೇ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿಲ್ಲ. ಸಂಸ್ಥೆಯ ಸಭಾಂಗಣದಲ್ಲಿ ಭೋಜನ ಹಾಗೂ ತಂಗಲು ವ್ಯವಸ್ಥೆ ನೀಡಲಾಗಿತ್ತು. ಈ ಹಿಂದೆಯೂ ಅನೇಕರಿಗೆ ಅವಕಾಶ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಭಾ ಕಾರ್ಯಕ್ರಮ ಹೊರತುಪಡಿಸಿ ಇತರ ಚಟುವಟಿಕೆಗಳನ್ನು ಸಂಸ್ಥೆಯ ಹೊರ ಭಾಗದಲ್ಲಿ ನಡೆಸಲಾಗಿದ್ದು, ಶಾಲೆ ಆವರಣದ ಸಂಪೂರ್ಣ ಮಾಹಿತಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾನೂನು ಬಾಹಿರ ಚಟುವಟಿಕೆಗಳು ಇಲ್ಲಿ ನಡೆದಿಲ್ಲ ಎಂದು ತಿಳಿಸಿದರು.