ಶ್ರೀನಗರ, ಮೇ 20 (DaijiworldNews/MS): ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ, ರಾಂಬನ್ ಜಿಲ್ಲೆಯ ಮೇಕರ್ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಪರಿಣಾಮ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.
ಸುರಂಗದಲ್ಲಿ 10 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ.
'ರಾಂಬನ್ನ ಮೇಕರ್ಕೋಟೆ ಪ್ರದೇಶದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಖೂನಿ ನಾಲಾದಲ್ಲಿ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ 10 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಈಗಾಗಲೇ ನಾಲ್ವರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ' ಎಂದು ರಾಂಬನ್ನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
"ನಾನು ಜಿಲ್ಲಾಧಿಕಾರಿ ಹೆಚ್ ಮುಸ್ರತ್ ಇಸ್ಲಾಂ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಸುಮಾರು 10 ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿದ್ದು ಪರಿಸ್ಥಿತಿಯ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. " ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.