ಬೆಂಗಳೂರು, ಮೇ 24 (DaijiworldNews/HR): ಬಿ ಎಸ್ ವಿಜಯೇಂದ್ರ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್ ಕೈತಪ್ಪಿದ್ದು, ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಶಿಫಾರಸು ಮಾಡಲಾಗಿದ್ದರೂ, ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿದ್ದಾರೆ.
ಬಿ.ವೈ.ವಿಜಯೇಂದ್ರ ಅವರು ಟಿಕೆಟ್ ಲಭಿಸಿರುವ ನಾಲ್ವರಿಗೆ ಶುಭ ಕೋರಿ, ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೆ ಪತ್ರವನ್ನೂ ಬರೆದಿದ್ದು, ಪಕ್ಷದ ವರಿಷ್ಠರು ನನಗೆ ರಾಜ್ಯ ಉಪಾಧ್ಯಕ್ಷನಾಗುವ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ರಾಜಕೀಯ ಅಧಿಕಾರಗಳು ನಿಂತ ನೀರಲ್ಲ. ಇದನ್ನು ಕಾರ್ಯಕರ್ತರು, ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
ಇನ್ನು ಅನಗತ್ಯ ಟೀಕೆ, ಟಿಪ್ಪಣಿಗಳು, ಉದ್ಘೋಷಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದರೆ ಅದು ನನ್ನ ಮತ್ತು ತಂದೆಯ ಭಾವನೆಗಳಿಗೆ ಮಸಿ ಬಳಿದಂತಾಗುವುದೇ ಹೊರತು, ನಮ್ಮನ್ನು ಬೆಂಬಲಿಸಿದಂತೆ ಆಗುವುದಿಲ್ಲ. ಪಕ್ಷದ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಪಕ್ಷ ಎಂದಿಗೂ ಕೈ ಬಿಟ್ಟಿಲ್ಲ, ಬಿಡುವುದೂ ಇಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕು ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.