ಶ್ರೀನಗರ, ಮೇ 25 (DaijiworldNews/DB): ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಉತ್ತರ ಕಾಶ್ಮೀರದ ಕ್ರೀರಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಉಗ್ರರ ವಿರುದ್ದ ಎನ್ಕೌಂಟರ್ ನಡೆಯಿತು. ಈ ವೇಳೆ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಆದರೆ ಈ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಹತ್ಯೆಯಾದ ಭಯೋತ್ಪಾದಕರು ಶ್ರೀನಗರದಲ್ಲಿ ಭಯೋತ್ಪಾದನಾ ಕೃತ್ಯ ಎಸಗುತ್ತಿದ್ದರು. ಇವರ ಹತ್ಯೆ ಭದ್ರತಾ ಪಡೆಗಳಿಗೆ ಸಿಕ್ಕಿದ ಬಹುದೊಡ್ಡ ಯಶಸ್ಸು ಎಂದವರು ತಿಳಿಸಿದ್ದಾರೆ. ಗುಲ್ಮಾರ್ಗ್ ಗುಡ್ಡಗಾಡು ಪ್ರದೇಶದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಉಗ್ರರು ಸಕ್ರಿಯರಾಗಿರುವ ಮಾಹಿತಿ ಲಭ್ಯವಾಗಿದೆ. ಉಗ್ರ ನಿಗ್ರಹ ಕಾರ್ಯಾಚರಣೆ ಮುಂದವರಿದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.