ಬಾಗಲಕೋಟೆ, ಮೇ 25 (DaijiworldNews/DB): ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟ ಘಟನೆ ಕ್ಯಾದಿಗೇರಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ನೇತ್ರಾವತಿ ರಗಟಿ (14), ಅಂಜಲಿ ಸೂಡಿ (14) ಎಂದು ಗುರುತಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕ್ಯಾದಿಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಚೆಲ್ಲಾಪುರದ ಶಾಲೆಯಲ್ಲಿ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದೆ. ಅಪಘಾತವಾದ ಸ್ಥಳದಲ್ಲೇ ಕಾರು ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಐಹೊಳೆ ಪ್ರವಾಸದಲ್ಲಿದ್ದ ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಘಟನಾ ಸ್ಥಳಕ್ಕೆ ಭೇಟಿಯಿತ್ತಿದ್ದಾರೆ. ಅಮೀನಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.