ಲಖಿಂಪುರ, ಮೇ 29 (DaijiworldNews/SM): ಅಯೋಧ್ಯೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟ ಭೀಕರ ದುರಂತ ಉತ್ತರ ಪ್ರದೇಶದ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇತರ 9 ಮಂದಿ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಕರ್ನಾಟಕದಿಂದ ಅಯೋಧ್ಯೆಗೆ ಹೋಗುತ್ತಿದ್ದ ವ್ಯಾನ್ ನಲ್ಲಿ 16 ಮಂದಿ ಪ್ರಯಾಣಿಕರಿದ್ದರು. ಮೋತಿಪುರದ ನಾನಿಹ ಮಾರುಕಟ್ಟೆಯಲ್ಲಿ ಎದುರಿಗೆ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ವ್ಯಾನ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇವರೆಲ್ಲರೂ ಬೀದರ್ ಜಿಲ್ಲೆಯ ಗಾಂದಿ ಗಂಜ್ ನವರು ಎಂದು ಪೊಲೀಸರು ಹೇಳಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.