ತಿರುವನಂತಪುರಂ, ಜೂ 03 (DaijiworldNews/HR): ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಕೇರಳದಲ್ಲಿ ನಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದ್ದು, ಅದು ಮುಂದುವರಿಯುತ್ತದೆ. ನಮ್ಮ ದೇಶವು ಭಾರತದ ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಜಾತ್ಯತೀತ ತತ್ವದ ಮೇಲೆ ಕೆಲಸ ಮಾಡುತ್ತಿದೆ. ಇಂದಿನ ದಿನಗಳಲ್ಲಿ ಜಾತ್ಯತೀತತೆಯನ್ನು ನಾಶಮಾಡುವ ಪ್ರಯತ್ನಗಳು ನಡೆಯುತ್ತಿದ್ದು, ಈ ಘಟನೆಯ ವಿರುದ್ಧ ಕೇರಳ ಸರ್ಕಾರವು ದೃಢವಾದ ನಿಲುವು ತೆಗೆದುಕೊಂಡಿದೆ ಎಂದರು.
ಇನ್ನು ಜನರಲ್ಲಿ ಕೋಮು ಉದ್ವಿಗ್ನತೆಯನ್ನು ಉಂಟು ಮಾಡಲು ದೇಶದ ವಿವಿಧ ಭಾಗಗಳಲ್ಲಿ ಹಲವಾರು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ. ಆದರೆ ಇಲ್ಲಿ ನಮ್ಮ ಸಮಾಜದ ಅತ್ಯಂತ ಬಡ ಕುಟುಂಬಗಳನ್ನು ಗುರುತಿಸಲು ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಈ ಸಮೀಕ್ಷೆಯ ಭಾಗವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಕೊರೊನಾ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಅನ್ನು ಜಾರಿಗೆ ತರುತ್ತೇವೆ ಎಂದು ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.