ಬೆಂಗಳೂರು, ಜೂ 03 (DaijiworldNews/HR): ಇಂದು ಬೆಳಗ್ಗೆ ಕಲಬುರಗಿ ಜಿಲ್ಲೆಯ ಕಮಲಾಪುರದ ಹೊರವಲಯದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ನಡೆದಿದ್ದು, ಅಪಘಾತ ಸಂಬಂಧ ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ . ಶ್ರೀರಾಮುಲು ತಿಳಿಸಿದ್ದಾರೆ .
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಅಪಘಾತದಿಂದ ಹೊತ್ತಿ ಉರಿದ ಖಾಸಗಿ ಬಸ್ ನಲ್ಲಿ ಒಂದೇ ಕುಟುಂಬದ 35 ಮಂದಿ ಪ್ರಯಾಣಿಸುತ್ತಿದ್ದು, ಈ ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಇನ್ನು ಅಪಘಾತ ಸಂಬಂಧ ತನಿಖೆಗೆ ಆದೇಶ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ತೆರಳಿದ್ದು, ಪರಿಶೀಲನಾ ಕಾರ್ಯ ಕೈಗೊಂಡಿದ್ದಾರೆ. ತನಿಖಾ ವರದಿ ಬಂದ ನಂತರ ದುರಂತದ ಬಗ್ಗೆ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ.
ಈ ಘಟನೆ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.