ಬೆಂಗಳೂರು, ಜೂ. 05 (DaijiworldNews/DB): ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಅಂಜು ಅಂಜನ್ (26) ಎಂದು ಗುರುತಿಸಲಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿಯ ಮೂಲದ ಅಂಜು ಅಂಜನ್ ಕಣಿಯಾರ್ (28) ಎಂಬಾತನನ್ನ ಪ್ರೀತಿಸಿ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಪೋಷಕರ ಒಪ್ಪಿಗೆಯೊಂದಿಗೆ ಈ ಮದುವೆ ನಡೆದಿತ್ತು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಂಜು ನೇಣಿಗೆ ಕೊರಳೊಡ್ಡಿದ್ದಾರೆ.
ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿರುವುದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಂಜು ಪೋಷಕರು ಆರೋಪಿಸಿದ್ದಾರೆ. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಡೂರು ತಾಲೂಕು ಬೋಳನಹಳ್ಳಿಯ ರವಿಕುಮಾರ್ ಹೇಮಾವತಿ ದಂಪತಿಯ ಎರಡನೇ ಪುತ್ರಿಯಾಗಿರುವ ಅಂಜು ಸಿವಿಲ್ ಇಂಜಿನಿಯರಿಂಗ್ನಲ್ಲಿ ಬಿಇ ಮಾಡಿದ್ದರು. ಬಳಿಕ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಹಾಸನದಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದ ವೇಳೆ ಅರಕಲಗೂಡು ನಿವಾಸಿ ಯುವಕ ಅಂಜನ್ ಜೊತೆ ಅಂಜುಗೆ ಪ್ರೇಮಾಂಕುರವಾಗಿತ್ತು. ಬಳಿಕ ಕಳೆದ ಫೆಬ್ರವರಿಯಲ್ಲಿ ಇವರಿಬ್ಬರ ಮದುವೆ ನಡೆದಿತ್ತು. ಮದುವೆ ಬಳಿಕ ಪತಿ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಬಗ್ಗೆ ಅಂಜು ತನ್ನ ತಾಯಿಯಲ್ಲಿ ಹೇಳಿಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ಅಂಜು ಪೋಷಕರು ಹೇಳಿದ್ದಾರೆ. ಪತಿ ಮನೆಯವರೇ ಕೊಲೆ ಮಾಡಿದ್ದಾರೆ ಎಂದವರು ಶಂಕಿಸಿದ್ದಾರೆ ಎಂದು ವರದಿಯಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821