ರಾಜಸ್ಥಾನ, ಜೂ. 07 (DaijiworldNews/DB): ಕಾರಿಗೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 8 ಮೃತಪಟ್ಟಿರುವ ಘಟನೆ ಬಾರ್ಮರ್ ಜಿಲ್ಲೆಯ ಗುಡಮಲಾನಿ ಮೆಗಾ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು ಜಲೋರ್ ಜಿಲ್ಲೆಯ ಸಂಚೋರ್ನವರೆಂದು ಗುರುತಿಸಲಾಗಿದೆ. ಮೃತರೆಲ್ಲರೂ ಗುಡಮಲಾನಿಯಲ್ಲಿ ನಡೆಯುತ್ತಿದ್ದ ಮದುವೆಗೆಂದು ಎಸ್ಯುವಿ ಕಾರಿನಲ್ಲಿ ಸೋಮವಾರ ರಾತ್ರಿ ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಟ್ರಕ್ಕೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು. ಗಾಯಗೊಂಡಿರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನೆ ಮಾಹಿತಿ ದೊರೆತ ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.