ರಾಂಚಿ, ಜೂ 11 (DaijiworldNews/DB): ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಖಂಡಿಸಿ ರಾಂಚಿಯಲ್ಲಿ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ.
ಪ್ರತಿಭಟನಾಕಾರರು ಬಂದೋಬಸ್ತ್ನಲ್ಲಿದ್ದ ಪೊಲೀಸರೊಂದಿಗೆ ಘರ್ಷಣೆಗಿಳಿದಿದ್ದರು. ಅಲ್ಲದೆ ಪೊಲೀಸರೆಡೆಗೆ ಕಲ್ಲು ತೂರಾಟ ನಡೆಸಿದರು. ಇದಕ್ಕೆ ಪ್ರತಿಯಾಗಿ ಪೊಲೀಸರೂ ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಚಾರ್ಜ್ ನಡೆಸಿದರು.
ಘರ್ಷಣೆ ವೇಳೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇಬ್ಬರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಗಾಯಾಳುಗಳಾಗಿರುವ ಹತ್ತು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.