ನವದೆಹಲಿ, ಜೂ 13 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ವಿಚಾರಣೆಗಾಗಿ ಇಡಿ ಕಚೇರಿಗೆ ಹಾಜರಾಗಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರವಾಗಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು.
ಇನ್ನು ಈ ಹಿನ್ನಲೆಯಲ್ಲಿ ಇಂದು ರಾಹುಲ್ ಗಾಂಧಿ, ದೆಹಲಿಯ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಕಚೇರಿಗೆ ಹಾಜರಾಗಿ, ಅಧಿಕಾರಿಗಳಿಗೆ ಇಡಿ ಸಮನ್ಸ್ ತೋರಿಸಿದ್ದು, ಇಡಿಯ ಅಸಿಸ್ಟೆಂಟ್ ಡೈರೆಕ್ಟರ್ ದರ್ಜೆ ಮೂವರು ಅಧಿಕಾರಿಗಳು ರಾಹುಲ್ ಗಾಂಧಿ ವಿಚಾರಣೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.