ನವದೆಹಲಿ,ಜೂ 16 (DaijiworldNews/SM): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆ ಮುಂದುವರೆಸಿದ್ದು, ಶುಕ್ರವಾರವೂ ಕೂಡ ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಆದರೆ, ತಾಯಿಯ ಅನಾರೋಗ್ಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್ ಮನವಿ ಮಾಡಿಕೊಂಡಿದ್ದಾರೆ.
ಸದ್ಯದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಬೇಕೆಂದು ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದು, ಈ ಬೇಡಿಕೆಗೆ ಜಾರಿ ನಿರ್ದೇಶನಾಲಯ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು, ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಕಾರಣ ನೀಡಿ, ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಸೋಮವಾರದವರೆಗೆ ಕಾಲಾವಕಾಶ ಕೋರಿದ್ದಾರೆ. ರಾಹುಲ್ ಗಾಂಧಿ ಅವರನ್ನು ಇಡಿ ಸತತ ಮೂರು ದಿನವೂ ಪ್ರಶ್ನಿಸಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸತತ ಮೂರು ದಿನಗಳ ಕಾಲ ಸುಮಾರು 27 ಗಂಟೆ ವಿಚಾರಣೆ ಎದುರಿಸಿದ್ದಾರೆ.