ಬೆಂಗಳೂರು, ಜೂ 17 (DaijiworldNews/MS): ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಲಾಗಿದೆ ಎಂಬ ಪ್ರಕರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ಹಿರಿಯ ವಕೀಲ ಸಿ ವಿ ನಾಗೇಶ್ ಅವರೊಂದಿಗೆ ಆಗಮಿಸಿದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶ ಬಿ ಜಯಂತಕುಮಾರ್ ಅವರು, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೂರುದಾರರ ಪರ ವಕೀಲರಿಗೆ ಸೂಚಿಸಿದ್ದು ಜಾಮೀನು ಅರ್ಜಿಯನ್ನು ಪರಿಶೀಲಿಸಿದ ನಂತರ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ದೂರುದಾರರ ಪರ ವಕೀಲ ಕೆವಿ ಧನಂಜಯ್ ಅವರು ಕೋರ್ಟ್ ಗೆ ತಿಳಿಸಿದ್ದಾರೆ.
ಇದನ್ನು ಮಾನ್ಯ ಮಾಡಿದ ನ್ಯಾಯಧೀಶರು ವಿಚಾರಣೆಯನ್ನು ಜೂ.18ರ ಶನಿವಾರಕ್ಕೆ ಮುಂದೂಡಿದರು.