ಧಾರವಾಡ, ಜೂ 18 (DaijiworldNews/DB): ದೇಶಾದ್ಯಂತ ನಡೆಯುತ್ತಿರುವ ಅಗ್ನಿಪಥ್ ಯೋಜನೆ ವಿರೋಧಿ ಹೋರಾಟ ಪ್ರಸ್ತುತ ಕರ್ನಾಟಕಕ್ಕೂ ಕಾಲಿಟ್ಟಿದೆ. ಧಾರವಾಡ ಮತ್ತು ಬೆಳಗಾವಿಯಲ್ಲಿ ಇಂದು ಪ್ರತಿಭಟನೆ ನಡೆದಿದೆ. ಧಾರವಾಡದಲ್ಲಿ ಲಾಠಿ ಚಾರ್ಜ್ ನಡೆಸಲಾಗಿದೆ.
ಬೆಳಗಾವಿಯಲ್ಲಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಯೋಜನೆ ವಿರೋಧಿಸಿ ಜೂ. 20ರಂದು ಖಾನಾಪುರ ಬಂದ್ಗೆ ಕರೆ ನೀಡಲಾಗಿದೆ. ಅಗ್ನಿಪಥ ಯೋಜನೆಯನ್ನು ಜಾರಿಗೊಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅಂಜಲಿ ನಿಂಬಾಳ್ಕರ್ ಈ ವೇಳೆ ಹೇಳಿದ್ದಾರೆ.
ಧಾರವಾಡದಲ್ಲಿ ಯುವಕರ ಗುಂಪು ಪ್ರತಿಭಟನೆ ನಡೆಸುತ್ತಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ರೈಲ್ವೇ ನಿಲ್ದಾಣಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೆ ಕೆಲ ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇಶಾದ್ಯಂತ ಏಳು ರಾಜ್ಯಗಳಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಉತ್ತರಪ್ರದೇಶ, ಬಿಹಾರದಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು.