ಬೆಂಗಳೂರು, ಜೂ 23 (DaijiworldNews/DB): ಉತ್ತರ ಕರ್ನಾಟಕ 2024ರಲ್ಲಿ ಪ್ರತ್ಯೇಕ ರಾಜ್ಯವಾಗುತ್ತದೆ ಎಂಬ ಸಚಿವ ಉಮೇಶ್ ಕತ್ತಿಯವರ ಹೇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯವನ್ನು ಇಬ್ಭಾಗ ಮಾಡುವ ಚರ್ಚೆ ಪ್ರಧಾನಿ ಅವರ ಮಟ್ಟದಲ್ಲಿಯೇ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿಯನ್ನು ಸಚಿವ ಉಮೇಶ್ ಕತ್ತಿ ಬಹಿರಂಗ ಪಡಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಬೇಕು ಎಂದವರು ಒತ್ತಾಯಿಸಿದ್ದಾರೆ.
ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದವರು ಆಗ್ರಹ ಮಾಡಿದ್ದಾರೆ.
ಸಾವಿರಾರು ಹಿರಿಯ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವ ದ್ರೋಹವಾಗುತ್ತದೆ. ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಹಾಕುತ್ತಿರುವುದು ಇದೇ ಮೊದಲಸಲವೇನಲ್ಲ. ಭಾಷಾ ಸೂಕ್ಷ್ಮ ಪ್ರದೇಶವಾದ ಬೆಳಗಾವಿಯಲ್ಲಿಯೇ ಇಂತಹ ಪ್ರಚೋದನಕಾರಿ ಹೇಳಿಕೆಗಳ ಪರಿಣಾಮದ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.