ಬೆಂಗಳೂರು, ಜೂ 25 (DaijiworldNews/DB): ನಾಡಪ್ರಭು ಕೆಂಪೇಗೌಡರ ಗೌರವಾರ್ಥಸರ್ಕಾರದಿಂದ ನೀಡಲಾಗುವ ಚೊಚ್ಚಲ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಬ್ಯಾಡ್ಮಿಂಟನ್ ತಾರೆ ಪ್ರಕಾಶ್ ಪಡುಕೋಣೆ ಆಯ್ಕೆಯಾಗಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನಸೌಧದಲ್ಲಿ ಜೂನ್ 27ರ ಸೋಮವಾರದಂದು ನಡೆಯುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ 5 ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದರು.
ಬೆಂಗಳೂರಿನ ಬೆಳವಣಿಗೆಗೆ ಮೂವರೂ ಸಾಧಕರು ಹೆಚ್ಚಿನ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಮತಯ್ತು ಸಾಧನೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಎಸ್.ಎಂ. ಕೃಷ್ಣ ಅವರ ಸ್ವಗೃಹದಲ್ಲಿ ಅವರನ್ನು ಭೇಟಿಯಾಗಿ ಸಚಿವ ಅಶ್ವತ್ಥ ನಾರಾಯಣ ಅವರು ಪ್ರಶಸ್ತಿ ಸ್ವೀಕಾರಕ್ಕೆ ಆಹ್ವಾನಿಸಿದರು. ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಪ್ರಶಸ್ತಿಗೆ ಆಯ್ಕೆಗಾಗಿ ರಚಿಸಲಾಗಿತ್ತು. ಉದ್ಯಮಿ ಮೋಹನದಾಸ್ ಪೈ, ವಿವೇಕಾನಂದ ಯೂತ್ ಮೂವ್ ಮೆಂಟ್ ಸ್ಥಾಪಕ ಆರ್. ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ. ಶಂಕರಲಿಂಗೇಗೌಡ ಅವರು ಸದಸ್ಯರಾಗಿ ಹಾಗೂ ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ವಿನಯದೀಪ್ ಅವರು ಸದಸ್ಯ ಕಾರ್ಯದರ್ಶಿ ಆಗಿ ಸಮಿತಿಯಲ್ಲಿದ್ದರು ಎಂದು ಅಶ್ವತ್ಥ ನಾರಾಯಣ ವಿವರಿಸಿದರು.