ಬೆಂಗಳೂರು, ಜು 07 (DaijiworldNews/DB): ಮಂಗಳೂರು, ಕಾರವಾರದಲ್ಲಿ ಕಡಲ್ಕೊರೆತ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಕಡಲ್ಕೊರೆತ ಉಂಟಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮಳೆ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದ.ಕ., ಉಡುಪಿ, ಉ.ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ವಿಪರೀತ ಮಳೆಯಾಗುವ ಸಾಧ್ಯತೆ ಇದೆ. ಕಂದಾಯ ಸಚಿವರು ಕೊಡಗಿಗೆ ತೆರಳಿದ್ದು, ಮಳೆ ವಿಷಯದಲ್ಲಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದರು.
ಕೆರೂರು ಪಟ್ಟಣದಲ್ಲಿ ಗಲಾಟೆ ನಡೆದ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪೊಲೀಸರು ಘಟನೆಯನ್ನು ಕೂಡಲೇ ನಿಯಂತ್ರಣಕ್ಕೆ ತಂದಿದ್ದಾರೆ. ಅಲ್ಲದೆ ಅಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ಕಾರಣರಾದ ಕೆಲವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.