ಬೆಂಗಳೂರು, ಜು 08(DaijiworldNews/SM): ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳನ್ನು ಅಲರ್ಟ್ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜು.8ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮತ್ತು ಪಂಚಾಯತ್ ಸಿ ಇ ಓ ಹಾಗೂ ಇತರೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ. ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಎಂಬುದರ ಕುರಿತು ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಲಿದ್ದಾರೆ.