ನವದೆಹಲಿ, ಜು 11(DaijiworldNews/MS): ದೇಶದಿಂದ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ನ್ಯಾಯಾಂಗ ನಿಂದನೆ ಆರೋಪದಡಿ ಸುಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು 2000 ರೂಪಾಯಿ ದಂಡ ವಿಧಿಸಿದೆ. ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಪೀಠ ಈ ತೀರ್ಪು ಪ್ರಕಟಿಸಿದೆ.
ಕಿಂಗ್ಫಿಷರ್ ಏರ್ಲೈನ್ಸ್ಗೆ ಸಂಬಂಧಿಸಿದ 9,000 ಕೋಟಿ ರೂ.ಗೂ ಹೆಚ್ಚು ಬ್ಯಾಂಕ್ ಸಾಲದ ಸುಸ್ತಿ ಪ್ರಕರಣದಲ್ಲಿ ಆರೋಪಿ ಪರಾರಿಯಾದ ಉದ್ಯಮಿ ವಿಜಯ್ ಮಲ್ಯ ಅವರು ತಪ್ಪಿತಸ್ಥರೆಂದು ಸಾಬೀತಾಗಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ.
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಯುಎಸ್ಡಿಯನ್ನು ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಮಾರ್ಚ್ 10 ರಂದು ಪ್ರಕರಣದ ಆದೇಶವನ್ನು ಕಾಯ್ದಿರಿಸಿತ್ತು.
ಹಿರಿಯ ವಕೀಲ ಮತ್ತು ಅಮಿಕಸ್ ಕ್ಯೂರಿ ಜೈದೀಪ್ ಗುಪ್ತಾ ಅವರನ್ನು ವಿವಿಧ ಅಂಶಗಳ ಬಗ್ಗೆ ಆಲಿಸಿದ ನಂತರ, ಈ ಹಿಂದೆ ಮಲ್ಯ ಅವರನ್ನು ಪ್ರತಿನಿಧಿಸುತ್ತಿದ್ದ ವಕೀಲರು ಮಾರ್ಚ್ 15 ರೊಳಗೆ ಲಿಖಿತ ಸಲ್ಲಿಕೆಗಳನ್ನು ಸಲ್ಲಿಸಲು ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರ್ಧರಿಸಿತ್ತು.