ನವದೆಹಲಿ, ಜು 13 (DaijiworldNews/DB): ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಮುಂದಿನ ವಾರ ನಡೆಯಲಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಆದರೆ ಹೈಕೋರ್ಟ್ ಆದೇಶದಿಂದ ಅಸಮಾಧಾನಗೊಂಡ ಕೆಲವರು ಸುಪ್ರೀಂ ಮೆಟ್ಟಿಲೇರಿದ್ದರು. ಈ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದೀಗ ಈ ಅರ್ಜಿಗಳ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರು ಇಂದು ಸುಪ್ರೀಂ ಕೋರ್ಟ್ನಲ್ಲಿ ಕಲಾಪ ಆರಂಭದ ವೇಳೆ ನ್ಯಾಯಪೀಠದ ಗಮನ ಸೆಳೆದರು. ಮಾರ್ಚ್ನಲ್ಲೇ ಅರ್ಜಿಗಳು ಸಲ್ಲಿಕೆಯಾಗಿದ್ದು, ವಿಚಾರಣೆ ಕೈಗೆತ್ತಿಕೊಳ್ಳದೇ ಇರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದವರು ನ್ಯಾಯಪೀಠದೆದುರು ಹೇಳಿದರು. ಹೀಗಾಗಿ ಮುಂದಿನ ವಾರ ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಮಣ ಅವರು ಉತ್ತರಿಸಿ, ಎರಡು ನ್ಯಾಪೀಠಗಳು ಸದ್ಯ ಕಾರ್ಯ ನಿರ್ವಹಿಸುತ್ತಿಲ್ಲವಾದ್ದರಿಂದ ಅರ್ಜಿಗಳ ವಿಚಾರಣೆಯ ಮರುಹಂಚಿಕೆ ಮಾಡಬೇಕಾಗಿದೆ. ಸೂಕ್ತ ನ್ಯಾಯಪೀಠದ ಮುಂದೆ ಮುಂದಿನ ವಾರ ವಿಚಾರಣೆ ಕೈಗೆತ್ತಿಕೊಳ್ಳೋಣ ಎಂದು ತಿಳಿಸಿದರು.