ಬೆಂಗಳೂರು, ಜು 18 (DaijiworldNews/MS): ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಈ ಮೇಲ್ ಬಂದ ಹಿನ್ನಲೆಯಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ .
ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್ವ್ಯೂ ಪಬ್ಲಿಕ್ ಶಾಲೆಗೆ ಹುಚ್ವ ವೆಂಕಟ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಬಾಂಬ್ ಬೆದರಿಕೆ ಬಂದಿದೆ ಎಂದು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿದ ತಕ್ಷಣ ಶಾಲಾ ಆಡಳಿತ ಮಂಡಳಿ ಶಾಲೆಗೆ ರಜೆ ನೀಡಿದೆ. ಶಾಲೆಯಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಹೊರಗಡೆ ಕಳುಹಿಸಲಾಗಿದೆ.
ಶಾಲೆಯ ಕಟ್ಟಡವನ್ನು ತಪಾಸಣೆ ನಡೆಸಿ, ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಶಾಲೆಗೆ ರಜೆ ನೀಡಲಾಗಿದೆ. ಪೊಲೀಸರ ತಪಾಸಣೆ ಕಾರ್ಯ ಮುಂದುವರಿದಿದೆ.