ಬೆಂಗಳೂರು, ಜು 18 (DaijiworldNews/HR): ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭಿಕ್ಷಾಟನೆ ಹೆಸರಿನಲ್ಲಿ ವಿವಿಧ ಕಾನೂನು ಬಾಹಿರ ಕೃತ್ಯಗಳು ನಡೆಯುವುದನ್ನು ಇಲಾಖೆ ಗುರುತಿಸಿದ್ದು, ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದರು.
ಇನ್ನು ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಹಾಗೂ ಈ ಚಟುವಟಿಕೆಯಲ್ಲಿ ಗೃಹ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಮಿಕ ಇಲಾಖೆಗಳ ಪಾತ್ರ ಹಾಗೂ ಸಹಕಾರದ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡಲಾಗಿದೆ ಎಂದಿದ್ದಾರೆ.
ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಈಗಾಗಲೆ 'ಈ ಗುರುತು' ಎಂಬ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದ್ದು ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.