ನವದೆಹಲಿ/ಬೆಂಗಳೂರು, ಜು 21 (DaijiworldNews/DB): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.
ಕೇಂದ್ರ ಸರ್ಕಾರ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ನಿಂದ ರಾಜಭವನಕ್ಕೆ ತೆರಳಿ ಮುತ್ತಿಗೆ ಹಾಕಲು ತಯಾರಿ ನಡೆಸುತ್ತಿದ್ದಾರೆ. ಇದಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದು, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಂ ಉಂಟಾಗುವ ಸಾಧ್ಯತೆಯೂ ದಟ್ಟವಾಗಿದೆ. ಸುಮಾರು ಐದು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಫ್ರೀಡಂ ಪಾರ್ಕ್ ಸುತ್ತಮುತ್ತ 30 ಮಂದಿ ಇನ್ಪೆಕ್ಟರ್ ನೇತೃತ್ವದಲ್ಲಿ90 ಮಂದಿ ಟ್ರಾಫಿಕ್ ಪೊಲೀಸರನ್ನು ಈಗಾಗಲೇ ನಿಯೋಜನೆ ಮಾಡಲಾಗಿದೆ ಎನ್ನಲಾಗಿದೆ.
ದೆಹಲಿಯಲ್ಲಿಯೂ ಸಾವಿರಾರು ಸಂಖ್ಯೆಯಲ್ಲಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆಗಾಗಿ ಸೇರಿದ್ದು, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಸೇರಿ ಕೇಂದ್ರದ ವಿರುದ್ದ ಘೋಷಣೆಗಳನ್ನು ಕೂಗುತ್ತಿದ್ದಾರೆ. ಇಡಿ ಕಚೇರಿ ಕಡೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಸಂಸತ್ತುವರೆಗೆ ಪ್ರತಿಭಟನಾ ಮೆರವಣಿಗೆ ಸಾಗಲಿದೆ ಎಂದು ತಿಳಿದು ಬಂದಿದೆ. ಇದೇ ರೀತಿ ದೇಶದ ವಿವಿಧ ರಾಜ್ಯಗಳಲ್ಲಿಯೂ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯಲಿದೆ.