ನವದೆಹಲಿ, ಜು 23 (DaijiworldNews/DB): ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ಹಗರಣಗಳಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ನ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಮನೆಯಿಂದ 21 ಕೋಟಿ ರೂ. ವಶಪಡಿಸಿಕೊಂಡ ಬೆನ್ನಲ್ಲೇ ಈ ವಿಚಾರ ರಾಜಕೀಯವಾಗಿ ತೀವ್ರ ಜಟಾಪಟಿಗೆ ಕಾರಣವಾಗಿದೆ.
ಬಿಜೆಪಿ ನಾಯಕ ದಿಲೀಪ್ ಘೋಷ್ ಟ್ವೀಟ್ ಮಾಡಿ, ವಿವಿಧ ಹುದ್ದೆಗಳಿಗೆ ನೇಮಕಾತಿ ಮತ್ತಿತರ ಕಾರಣಗಳಿಂದಾಗಿ ಟಿಎಂಸಿ ನಾಯಕರು ಸಾಕಷ್ಟು ಹಣವನ್ನು ಕೂಡಿಟ್ಟಿದ್ದಾರೆ. ಅವೆಲ್ಲವನ್ನು ವಿಚಾರಣೆಗೊಳಪಡಿಸಿ ಅಕ್ರಮವನ್ನು ಬಯಲಿಗೆಳೆಯಬೇಕೆಂದು ಒತ್ತಾಯಿಸಿದ್ದಾರೆ. ಪಾರ್ಥಸಾರಥಿ ಟಿಎಂಸಿ ಭ್ರಷ್ಟಾಚಾರದ ಸಮುದ್ರದ ಆಳದಿಂದ ಪತ್ತೆಯಾದ ಮೀನು. ಇನ್ನು ಪ್ರಮುಖ ನಾಯಕರನ್ನೂ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಉಲ್ಲೇಖಿಸಿ, ಕಳ್ಳರು ಕಿರುಚಾಡುತ್ತಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ.