ಮಂಗಳೂರು, ಜು 27 (DaijiworldNews/MS): ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಇಂದು ಕೂಡಾ ಮುಂದುವರಿದ್ದು ಈ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಮತ್ತಷ್ಟು ಜೋರಾಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ.
ಕಠಿಣ ಕ್ರಮ ಕೇವಲ ಭರವಸೆಯಾಗಿಯೇ ಉಳಿದಿದೆ. ಈ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತರ ಹತ್ಯೆಯಲ್ಲಿಯೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಪಕ್ಷ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿರುವ ಜಿಲ್ಲೆಗಳ ಮಂಡಲ ಪದಾಧಿಕಾರಿಗಳು ರಾಜೀನಾಮೆ ನೀಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಉಡುಪಿಯಲ್ಲೂ ಬೈಲಕೆರೆ ವಾರ್ಡ್ ಸದಸ್ಯರು ಸಾಮೂಹಿಕ ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷರಿಗೆ ರವಾನಿಸಿದ್ದಾರೆ.
ಈಗಾಗಲೇ ವಿಜಯಪುರ, ಬಾಗಲಕೋಟೆ, ಕೊಪ್ಪಳ ,ಚಿತ್ರದುರ್ಗ, ಹುಬ್ಬಳ್ಳಿಯಲ್ಲಿ ಅನೇಕ ಬಿಜೆಪಿ ನಾಯಕರು, ಸದಸ್ಯರು ರಾಜೀನಾಮೆ ನೀಡಿದ್ದು , ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈ ಹಿಂದೆ ನಡೆದ ಹಿಂದೂ ಕಾರ್ಯಕರ್ತರ ಹತ್ಯೆ ಆರೋಪಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.