ಕೋಲಾರ:, ಜು 30 (DaijiworldNews/DB): ಕಾಂಗ್ರೆಸ್ ಕಚೇರಿಯಲ್ಲಿ ಇಬ್ಬರು ನಾಯಕರ ಬಣಗಳ ನಡುವೆ ನಡೆಯುತ್ತಿದ್ದ ಘರ್ಷಣೆಯನ್ನು ಚಿತ್ರೀಕರಿಸುತ್ತಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಮಾಜಿ ಸ್ಪೀಕರ್ ಕೆ. ಆರ್. ರಮೇಶ್ ಕುಮಾರ್ ಹಲ್ಲೆ ನಡೆಸಿದ ಘಟನೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.
ಸಿದ್ದರಾಮೋತ್ಸವ ಪೂರ್ವಭಾವಿ ಸಭೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುತ್ತಿದ್ದ ವೇಳೆ ಬ್ಯಾನರ್ನಲ್ಲಿ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಭಾವಚಿತ್ರ ಹಾಕಿಲ್ಲವೆಂದು ಬೆಂಬಲಿಗರು ಆಕ್ರೋಶ ವ್ಯಕ್ತಡಿಸಿದರು. ಈ ವೇಳೆ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣಗಳ ನಡುವೆ ಮಾತಿಗೆ ಮಾತು ಬೆಳೆದು ಘರ್ಷಣೆ ನಡೆಯಿತು. ಅಲ್ಲದೆ ಎರಡೂ ಬಣಗಳ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ಬಂದರು. ಈ ವೇಳೆ ಸ್ಥಳದಲ್ಲಿದ್ದ ಮಾಧ್ಯಮ ಪ್ರತಿನಿಧಿಗಳು ಗಲಾಟೆಯ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದ ವೇಳೆ ರಮೇಶ್ ಕುಮಾರ್ ಕುರ್ಚಿಯಿಂದ ಎದ್ದು ಬಂದು ಇಬ್ಬರು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಹಲ್ಲೆ ನಡೆಸಿದ ರಮೇಶ್ಕುಮಾರ್ ಸ್ಥಳದಿಂದ ನಿರ್ಗಮಿಸಿದ ಬಳಿಕ ಅವರ ಬೆಂಬಲಿಗರಾದ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಮತ್ತು ಎಂಎಲ್ಸಿ ಅನಿಲ್ ಕುಮಾರ್ ಮಾಧ್ಯಮಗಳ ಮುಂದೆ ಕ್ಷಮೆ ಯಾಚಿಸಿದರು.
ಕರ್ತವ್ಯದಲ್ಲಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ರಮೇಶ್ ಕುಮಾರ್ ನಡೆಯ ವಿರುದ್ಧ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.