ಶಿವಮೊಗ್ಗ, ಜು 31 (DaijiworldNews/DB): ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್ನ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ತನಿಖೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ ಅವರು, ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಎರಡು ರಾಜ್ಯಗಳ ನಂಟಿರುವುದರಿಂದ ತನಿಖೆಯ ಹೊಣೆಯನ್ನು ಎನ್ಐಎಗೆ ಒಪ್ಪಿಸಲಾಗಿದೆ.
ಫಾಝಿಲ್ ಹತ್ಯೆ ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ. ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಆದಷ್ಟು ಬೇಗ ಆರೋಪಿಗಳನ್ನು ಭೇದಿಸುತ್ತೇವೆ. ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದರು.
ಕೊಲೆ ಪ್ರಕರಣಗಳ ತ್ವರಿತ ವಿಚಾರಣೆ ಅಗತ್ಯ. ಈ ನಿಟ್ಟಿನಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಲಾಗುತ್ತಿದೆ. ಆದ್ಯತೆಯ ಮೇರೆಗೆ ಎಲ್ಲಾ ಪ್ರಕರಣಗಳನ್ನು ಪರಿಗಣಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.