ಬೆಂಗಳೂರು, ಆ 02 (DaijiworldNews/DB): ರಾಜ್ಯದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ಧಾರಾಕಾರ ಮಳೆಯಿಂದ ತತ್ತರಿಸಿದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದೆ. ಮಳೆ ಅನಾಹುದಿಂದಾಗಿ ಸಾವು ನೋವು, ಆಸ್ತಿ ಹಾನಿಗಳಾಗಿದ್ದು, ಈ ಕುರಿತು ಇಂದು ಸಭೆ ನಡೆಸಲಾಗುವುದು. ರಾಜ್ಯದ ಇತರೆಡೆಗಳಲ್ಲಿಯೂ ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದೆ. ಈ ನಿಟ್ಟಿನಲ್ಲಿ ಮಳೆ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸೂಚನೆ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಮಂಕಿಪಾಕ್ಸ್ ನಿಯಂತ್ರಣ ಸಂಬಂಧಿಸಿಯೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದವರು ಇದೇ ವೇಳೆ ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಐಐಎ ನ ಕಲ್ಚರಲ್ ವಿಂಗ್ ನ ಸಭೆಗಾಗಿ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.