ಬೆಂಗಳೂರು, ಆ 03 (DaijiworldNews/SM): ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ. ಬಸವಣ್ಣನವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಿ ಕರ್ನಾಟಕದಲ್ಲಿ ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಸರಕಾರದ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಎಲ್ಲರೂ ಪ್ರಾಮಾಣಿಕರಾಗಿರಬೇಕು, ಕಾಯಕವೇ ಕೈಲಾಸ ಎಂಬ ಬಸವಣ್ಣನವರು ಹೇಳಿದ್ದರೆ, ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಸರ್ಕಾರ ನಡೆಯುತ್ತಿದೆ ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು.
ದಾವಣಗೆರೆ - ಹರಿಹರ ಮಾರ್ಗ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶಾಮನೂರು ಶಿವಶಂಕರಪ್ಪರ ಒಡೆತನದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಿದ್ದರಾಮಯ್ಯ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಾಮಾಜಿಕ ನ್ಯಾಯ ಪರಿಕಲ್ಪನೆ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಇಲ್ಲ. ಈ ಹಿಂದೆ ಕರ್ನಾಟಕದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸಿತ್ತು. ಸಾಮರಸ್ಯ ಹಾಗೂ ಸಮಾಜದ ಸ್ವಾಸ್ಥ್ಯ ಕದಡುವ ರೀತಿಯಲ್ಲಿ ಕೆಲಸ ಮಾಡುತ್ತಿರುವ ಬಿಜೆಪಿಯಿಂದ ಜನರು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದ ಅವರು, ಸಮಾಜದಲ್ಲಿ ಕೋಮುಸಾಮರಸ್ಯ, ಜಾತಿ ಜಾತಿಗಳ ನಡುವೆ ಸಂಘರ್ಷ ಹುಟ್ಟು ಹಾಕಿ ಸಮಾಜದ ಸ್ವಾಸ್ಥ್ಯ ಹಾಳುಗೆಡವಿರುವ ಆರ್ಎಸ್ಎಸ್ ಹಾಗೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಇದಾಗಬೇಕು ಎಂದರೆ ಮತ್ತೆ 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು.