ಮಳವಳ್ಳಿ, ಆ 05 (DaijiworldNews/DB): ಕೌಟುಂಬಿಕ ಕಲಹ ತಾರಕಕ್ಕೇರಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಪುತ್ರನ ಮೈ ಮೇಲೆ ಸೀಮೆ ಎಣ್ಣೆ ಸುರಿದ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ.
ಸಿದ್ದೇಗೌಡ ಕೊಲೆಯತ್ನ ಆರೋಪಿ. ಈತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಬೆಳಕವಾಡಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಬುಧವಾರ ರಾತ್ರಿ ಪತ್ನಿ ಮಹದೇವಮ್ಮಳೊಂದಿಗೆ ಕ್ಷುಲ್ಲಕ ಕಾರಣಕ್ಕೆ ಈತ ಜಗಳ ತೆಗೆದಿದ್ದಾನೆ. ಬಳಿಕ ಗಲಾಟೆ ತಾರಕಕ್ಕೇರಿದ್ದು, ಪತ್ನಿ ಮೈ ಮೇಲೆ ಸೀಮೆ ಎಣ್ಣೆ ಸುರಿದಿದ್ದಾನೆ. ಈ ವೇಳೆ ಪುತ್ರ ಸಿದ್ದರಾಜು ತಡೆಯಲು ಬಂದಿದ್ದು ಆತನ ಮೇಲೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ತಾಯಿ-ಮಗ ಇಬ್ಬರಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಇಬ್ಬರನ್ನೂ ಆಸುಪಾಸಿನ ಮನೆಯವರು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಳಕವಾಡಿ ಪಿಎಸ್ಐ ವಿ.ಸಿ.ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.