ನವದೆಹಲಿ, ಆ 05 (DaijiworldNews/DB): ಎಸ್ಎಸ್ಸಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರಿಗೆ ಆಗಸ್ಟ್ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋಲ್ಕತ್ತಾದ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಇಂದು ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಯ ಇಡಿ ಕಸ್ಟಡಿ ಕೊನೆಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಅವರ ಎರಡು ದಿನಗಳ ಇಡಿ ಕಸ್ಟಡಿ ಕೊನೆಗೊಂಡ ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಇಬ್ಬರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಜಾರಿ ನಿರ್ದೇಶನಾಲಯವು ನ್ಯಾಯಾಲಯವನ್ನು ಮನವಿ ಮಾಡಿತ್ತು. ಇಡಿ ಕೋರಿಕೆಯನ್ನು ಮನ್ನಿಸಿದ ನ್ಯಾಯಾಲಯ ಇಬ್ಬರಿಗೆ ಆ. 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಬಂಧಿತ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಅವರಿಗೆ ಸೇರಿದ ಮನೆಗಳಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು 50 ಕೋಟಿ ರೂ ನಗದು, ಆಭರಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಇಬ್ಬರನ್ನೂ ಸುಧಾರಣಾ ಗೃಹದಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಇಡಿಯು ನ್ಯಾಯಾಲಯವನ್ನು ಕೋರಿದೆ ಎಂದು ವರದಿಗಳು ತಿಳಿಸಿವೆ.
ಪಶ್ಚಿಮ ಬಂಗಾಳ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬಂದಿಯನ್ನು ಅಕ್ರಮವಾಗಿ ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಿ ಜುಲೈ 23ರಂದು ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಬಂಧನದ ಬೆನ್ನಲ್ಲೇ ಪಾರ್ಥ ಚಟರ್ಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದರು.