ಬೆಂಗಳೂರು, ಆ 07 (DaijiworldNews/HR): ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಒಟ್ಟು 70 ಮಂದಿ ಮೃತಪಟ್ಟಿದ್ದು, 3,559 ಮನೆಗಳು ಸಂಪೂರ್ಣವಾಗಿ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇನ್ನು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಜೂನ್.1ರಿಂದ ಆಗಸ್ಟ್ 6ರವರೆಗೆ 70 ಮಂದಿ ಮೃತ್ಯು, 507 ಜಾನುವಾರು ಜೀವಹಾನಿ, 3559 ಮನೆಗಳು ಸಂಪೂರ್ಣ ಹಾನಿ, 17212 ಮನೆಗಳು ಭಾಗಶ: ಹಾನಿ, 129087 ಹೆಕ್ಟೇರ್ ಕೃಷಿ ಬೆಳೆ ಹಾನಿ, 7942 ಹೆಕ್ಟೇರ್ ತೋಟಗಾರಿಕಾ ಬೆಳೆ, ಶಾಳೆಗಳು, ಅಂಗನವಾಡಿಗಳಿಗೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.