ಬೆಂಗಳೂರು, ಆ 08 (DaijiworldNews/SM): ರಾಜ್ಯದಲ್ಲಿ ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಆಯಾ ಸಂದರ್ಭಕ್ಕನುಗುಣವಾಗಿ ಅಗತ್ಯಕ್ಕೆ ತಕ್ಕಂತೆ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸರ್ಕಾರದಿಂದ ಬೀದರ್ ಜಿಲ್ಲೆಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ಈಶ್ವರ್ ಖಂಡ್ರೆ ಮತ್ತು ಎಂಬಿ ಪಾಟೀಲ್ ಅವರ ಆರೋಪಕ್ಕೆ ಟ್ವೀಟರ್ ನಲ್ಲಿ ಉತ್ತರಿಸಿರುವ ಮುಖ್ಯಮಂತ್ರಿ, ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನ ಆಧರಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ಆಗಸ್ಟ್ 2ರ ಮಾಹಿತಿಯಂತೆ ಬೀದರ್ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 20. 45 ಕೋಟಿ, ಕಲಬುರಗಿ ಜಿಲ್ಲಾಧಿಕಾರಿ ಖಾತೆಯಲ್ಲಿ 42. 07 ಕೋಟಿ, ಯಾದಗಿರಿ ಜಿಲ್ಲಾಧಿಕಾರಿಗಳ ಬಳಿ 25.14 ಕೋಟಿ, ವಿಜಯಪುರ ಜಿಲ್ಲಾಧಿಕಾರಿ ಖಾತೆಯಲ್ಲಿ 28.5 ಕೋಟಿ ಅನುದಾನ ಲಭ್ಯವಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.