ಮಂಡ್ಯ, ಆ 10 (DaijiworldNews/DB): ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡಿಲ್ಲ. ಬಿಜೆಪಿಯವರೇ ಈ ಗೊಂದಲಕ್ಕೆ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮದ್ದೂರಿನ ಶಿವಪುರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪಾದಯಾತ್ರೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆಯಾಗುತ್ತಾರೆಂಬ ಹೇಳಿಕೆಯನ್ನು ಬಿಜೆಪಿಯ ಹಲವು ಮುಖಂಡರು ನೀಡಿರುವುದನ್ನು ಆಧಾರವಾಗಿಟ್ಟುಕೊಂಡು ಮೂರನೇ ಸಿಎಂ ಬರುತ್ತಾರೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಗೊಂದಲ ಸೃಷ್ಟಿಸಿರುವುದು ಬಿಜೆಪಿಯವರೇ ಹೊರತು ನಾವಲ್ಲ. ಆದರೆ ಜನರೇ ತೀರ್ಮಾನ ಮಾಡುತ್ತಾರೆ. ನಾನೇನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.
ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 136 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ. ಸರ್ವೇ ಕಾರ್ಯಗಳಲ್ಲಿ ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಖಚಿತವಾಗಿದೆ. ಇನ್ನುಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಕಾರ್ಯಕರ್ತರು ಒಗ್ಗಟ್ಟಿನಿಂದ ತೊಡಗಿಸಿಕೊಂಡು ಪಕ್ಷ ಸಂಘಟನೆ ಮಾಡಿದಾಗ ಪಕ್ಷದ ಅಭ್ಯರ್ಥಿ ಗೆಲುವು ಸುಲಭ. ಕಾಂಗ್ರೆಸ್ನ್ನು ಅಧಿಕಾರಕ್ಕೆ ತರಲು ಎಲ್ಲರೂ ಪ್ರಯತ್ನಿಸಬೇಕು ಎಂದರು.