ಕೋಲ್ಕತಾ, ಆ 11 (DaijiworldNews/DB): ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದಂಪತಿಯೊಬ್ಬರು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಇಬ್ಬರು ಮಹಿಳೆಯರು ಹಾಗೂ ಅಪ್ರಾಪ್ತ ಬಾಲಕಿ ಸೇರಿದಂತೆ ನಾಲ್ವರು ಹತ್ಯೆಯಾಗಿದ್ದಾರೆ. ಘಟನೆ ಹಿಂದೆ ದಂಪತಿಯ ಕೈವಾಡ ಇದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪತ್ನಿಯನ್ನು ಬಂಧಿಸಲಾಗಿದ್ದು, ಪತಿ ಪರಾರಿಯಾಗಿದ್ದಾನೆ. ಹಳೆ ದ್ವೇಷದ ಕಾರಣದಿಂದ ಹತ್ಯೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಮನೆಯೊಳಗಿನಿಂದ ರಕ್ತ ಹರಿದು ಹೊರ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆ ಬಳಿಕ ಘಟನೆ ಬೆಳಕಿಗೆ ಬಂದಿದೆ. ತತ್ಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.