ಬೆಂಗಳೂರು, ಆ 11 (DaijiworldNews/MS): ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ರಾಜ್ಯದಲ್ಲಿ ಇನ್ಮುಂದೆ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 7.2% ಕೋವಿಡ್ ಪಾಸಿಟಿವಿಟಿ ದರ ಇದೆ. ಆದರೆ ಕೆಲ ಜಿಲ್ಲೆಗಳಲ್ಲಿ ರಾಜ್ಯದ ಪಾಸಿಟಿವಿಟಿ ದರಕ್ಕಿಂತ ಹೆಚ್ಚು ದರ ದಾಖಲಾಗಿದೆ. ಧಾರವಾಡದಲ್ಲಿ ಅತಿ ಹೆಚ್ಚು ದಾಖಲಾಗಿದೆ. ರಾಜ್ಯದಲ್ಲಿ ಪ್ರತಿ ದಿನ 30 ಸಾವಿರ ಮಾದರಿಗಳನ್ನು ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಕೇಂದ್ರದ ಮಾರ್ಗಸೂಚಿಯಂತೆ, ರೋಗ ಲಕ್ಷಣ ಇರುವವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಕೊವೀಡ್ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ ಮಂಕಿಪಾಕ್ಸ್ ನಿಯಂತ್ರಣ ಕುರಿತಂತೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.