ನವದೆಹಲಿ, ಆ 12 (DaijiworldNews/DB): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ ರಾಜ್ಯಗಳು ಯಾವುದೇ ಬೃಹತ್ ಸಭೆ-ಸಮಾರಂಭ ಆಯೋಜಿಸಬಾರದು ಎಂದು ಕೇಂದ್ರ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.
ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರಿಸಬಾರದು. ಕೋವಿಡ್ ಹಿನ್ನೆಲೆಯಲ್ಲಿ ಈ ಹಿಂದೆ ಬಿಡುಗಡೆ ಮಾಡಲಾಗಿರುವ ಮಾರ್ಗಸೂಚಿಗಳನ್ನು ಎಲ್ಲರೂ ಪಾಲನೆ ಮಾಡಬೇಕು. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ 'ಸ್ವಚ್ಛ ಭಾರತ್' ಅಭಿಯಾನ ಕೈಗೊಳ್ಳಬೇಕು. ಜನ ಸ್ವಯಂ ಪ್ರೇರಿತವಾಗಿ ತೊಡಗಿಸಿಕೊಳ್ಳುವಂತೆ ತಿಂಗಳ ಅವಧಿಯ ಸ್ವಚ್ಚತಾ ಅಭಿಯಾನವನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,561 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, 49 ಸಾವುಗಳು ಸಂಭವಿಸಿರುವ ಬಗ್ಗೆ ವರದಿಯಾಗಿದೆ. ದಿನಕ್ಕೆ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಸದ್ಯ ದೇಶದಲ್ಲಿ ಪತ್ತೆಯಾಗುತ್ತಿರುವುದರಿಂದ ಅಮೃತ ಮಹೋತ್ಸವ ಸಂದರ್ಭದಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದೆ.