ಬೆಂಗಳೂರು, ಆ 12 (DaijiworldNews/SM): ರಾಜ್ಯದಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳಲು ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
‘ಪ್ರತಿಭಟನೆ, ಹೋರಾಟ ಹಾಗೂ ಇನ್ನಿತರ ಸಂದರ್ಭಗಳಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ವಿರುದ್ಧ ದಾಖಲಾಗಿದ್ದ 30ಕ್ಕೂ ಹೆಚ್ಚು ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳಲು' ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಶುಕ್ರವಾರ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ‘2019ರಿಂದ ದಾಖಲಾಗಿರುವ 30ಕ್ಕೂ ಪ್ರಕರಣಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ. ವಿಚಾರಣೆಯ ಅಂತಿಮ ಹಂತದಲ್ಲಿರುವ ಪ್ರಕರಣಗಳು ಇವು ಆಗಿವೆ' ಎಂದು ಹೇಳಿದ್ದಾರೆ.
‘ಕೊಲೆ, ಕೊಲೆಯತ್ನ ಸಹಿತ ಕ್ರಿಮಿನಲ್ ಪ್ರಕರಣಗಳು, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು, ಪೋಸ್ಕೋ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ ಸಂಘಟನೆಗಳ ಮೇಲೆ ಹಾಕಿರುವ ಕೇಸುಗಳನ್ನು ವಾಪಸ್ ಪಡೆದುಕೊಳ್ಳಲಾಗುವುದು ಎಂದರು.