ಬೆಂಗಳೂರು, ಆ 21 (DaijiworldNews/HR): ಕೊರೊನಾ ರೋಗಿಗಳಿಂದ ಶುಲ್ಕ ಪಡೆಯುವುದರೊಂದಿಗೆ ಸರ್ಕಾರದಿಂದಲೂ ಹಣ ಪಡೆದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್ ಆಧಾರದಲ್ಲಿ ಕೊರೊನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿದ್ದು, ಕೊರೊನಾ ರೋಗಿಗಳ ಕುಟುಂಬಕ್ಕೆ ನೆರವಾಗುವ ಸದುದ್ದೇಶದಿಂದ ಸರ್ಕಾರ ಈ ಪ್ರಯೋಜನವನ್ನು ನೀಡುತ್ತಿದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್ನಿಂದಲೂ ಹಣ ಪಡೆದುಕೊಂಡಿವೆ ಎಂದರು.
ಇನ್ನು ಈವರೆಗೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಒಟ್ಟು 18.87 ಕೋಟಿ ರೂ. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದುಬಂದಿದೆ.