ಹೈದರಾಬಾದ್, ಆ 23 (DaijiworldNews/DB): ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಿ ಆದೇಶಿಸಿದೆ.
ರಾಜಾ ಸಿಂಗ್ ಅವರ ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮಂಗಳವಾರ ಬೆಳಗ್ಗೆ ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಬಿಜೆಪಿಯಿಂದ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪಕ್ಷದ ಶಿಸ್ತು ಮತ್ತು ಸಂವಿಧಾನಕ್ಕೆ ವಿರುದ್ದವಾಗಿ ಹೇಳಿಕೆ ನೀಡಿರುವುದರಿಂದ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಅಮಾನತು ಪತ್ರದಲ್ಲಿ ಬಿಜೆಪಿ ತಿಳಿಸಿದೆ.
ರಾಜಾ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೈದರಾಬಾದ್ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆದಿತ್ತು. ಅಲ್ಲದೆ, ಹಲವಾರು ಮಂದಿ ಅವರ ಹೇಳಿಕೆಯನ್ನು ಆಕ್ಷೇಪಿಸಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು.