ತುಮಕೂರು, ಆ 25 (DaijiworldNews/DB): ತುಮಕೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಟ್ವೀಟ್ ಮುಖಾಂತರ ಸಂತಾಪ ಸೂಚಿಸಿದ ಸಿಎಂ, ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ಒದಗಿಸುವುದಾಗಿ ತಿಳಿಸಿದ್ದಾರೆ.
ದುಡಿಮೆಗಾಗಿ ಬಂದ ಕೂಲಿ ಕಾರ್ಮಿಕರು ತುಮಕೂರಿನ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿಗಳು ಪರಿಹಾರ ಘೋಷಿಸಿದ್ದು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಇಂದು ಮುಂಜಾನೆ 4 ಗಂಟೆಗೆ ಕ್ರೂಸರ್ ಲಾರಿ ಢಿಕ್ಕಿಯಾಗಿ 9 ಮಂದಿ ರಾಯಚೂರಿನ ದಿನಗೂಲಿ ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಈಗಾಗಲೇ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ.