ಬೆಂಗಳೂರು, ಆ 27 (DaijiworldNews/DB): ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಹೊರತುಪಡಿಸಿ ಅಧ್ಯಕ್ಷ ಸ್ಥಾನಕ್ಕೆ ಸರಿ ಹೊಂದುವ ವ್ಯಕ್ತಿ ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಯಾರಿಲ್ಲ. ಹೀಗಾಗಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಮರಳುವಂತೆ ಮನವಿ ಮಾಡಲಾಗುವುದು. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಯಲಿದೆ ಎಂದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕನಾಗುವವರು ಮತ್ತು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ದೇಶಾದ್ಯಂತ ಪರಿಚಯ ಇರುವವರೇ ಆಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮತ್ತು ಪಶ್ಚಿಮ ಬಂಗಾಳದಿಂದ ಗುಜರಾತ್ವರೆಗೆ ಜನರು ಅವರನ್ನು ಬೆಂಬಲಿಸುವಂತಹವರಾಗಿರಬೇಕು. ಅಂತಹ ವರ್ಚಸ್ಸಿರುವುದು ರಾಹುಲ್ ಗಾಂಧಿಯವರಲ್ಲಿ ಮಾತ್ರ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಅವರೇ ಸೂಕ್ತ ವ್ಯಕ್ತಿ ಎಂದವರು ತಿಳಿಸಿದರು.