ನವದೆಹಲಿ, ಆ 29 (DaijiworldNews/MS): ಕೊನೆಗೂ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ದಿನಾಂಕ ನಿಗದಿಯಾಗಿದೆ. ಬರೋಬ್ಬರಿ 22 ವರ್ಷಗಳ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅ. 17 ರಂದು ಚುನಾವಣೆ ನಡೆಸಲಾಗುತ್ತಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದ್ದು ಅಂದೇ ಫಲಿತಾಂಶ ಹೊರಬರಲಿದೆ. 2000ರಲ್ಲಿಕೊನೆಯ ಬಾರಿಗೆ ಅಧ್ಯಕ್ಷೀಯ ಚುನಾವಣೆ ನಡೆದಿತ್ತು.
ನೂತನ ಅಧ್ಯಕ್ಷರ ಆಯ್ಕೆಗೆ ಸೆಪ್ಟೆಂಬರ್ 24 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ ಎಂದು ತಿಳಿದುಬಂದಿದೆ.
ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರದ ಆಘಾತಕಾರಿ ರಾಜೀನಾಮೆ ಮತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರು ಬರೆದ ಪತ್ರದಲ್ಲಿ "ಪಕ್ಷದ ಸಂಪೂರ್ಣ ಸಮಾಲೋಚನಾ ಕಾರ್ಯವಿಧಾನವನ್ನು ಕೆಡವಿದ್ದಾರೆ" ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಸಿಡಬ್ಲುಸಿ ಸಭೆ ನಡೆದಿದೆ.
ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಸ್ಪರ್ಧಿಸಲು ನಿರಾಸಕ್ತಿ ತೋರುತ್ತಿರುವುದರಿಂದ ಈ ಚುನಾವಣೆ ಕಾಂಗ್ರೆಸ್ ಗೆ ಪ್ರಮುಖ ಸವಾಲು ಆಗಿದ್ದು, ಅನೇಕ ಪ್ರಯತ್ನಗಳ ಹೊರತಾಗಿಯೂ ಅವರು ಈವರೆಗೂ ತನ್ನ ನಿಲುವನ್ನು ಸ್ಪಷ್ಟಪಡಿಸಿಲ್ಲ.