ನವದೆಹಲಿ, ಆ 30 (DaijiworldNews/MS): ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50 ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ ನಾಯಕರು ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದರು.
ಅವರು ಜಂಟಿ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದರು.
ಚಾಂದ್ ಮತ್ತು ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
"ನಾವು ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಂಟಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇವೆ" ಎಂದು ಬಲ್ವಾನ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ 73 ರ ಹರೆಯದ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಒಡನಾಟವನ್ನು ಅಂತ್ಯಗೊಳಿಸಿದ್ದು , "ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಇದಕ್ಕೆ ರಾಹುಲ್ ಗಾಂಧಿ ಅವರೇ ನೇರ ಕಾರಣಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರದಲ್ಲಿ ಆರೋಪಿಸಿದ್ದರು.
ಕಾಂಗ್ರೆಸ್ ಗೆ ಗುಡ್ ಬೈ ಹೇಳಿರುವ ಅಜಾದ್ ಜಮ್ಮು ಮತ್ತು ಕಾಶ್ಮೀರದಿಂದ ನೂತನ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸಲಿದ್ದಾರೆ.