ಜಾರ್ಖಂಡ್, ಸೆ 04 (DaijiworldNews/DB): ದುಮ್ಕಾ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿಯ ಶವದ ಮರಣೋತ್ತರ ಪರೀಕ್ಷೆಯಲ್ಲಿ ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳೆಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.
ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿಯ ಶವ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿತ್ತು. ಬಳಿಕ ಬಾಲಕಿಯ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳೆಂಬ ಸಂಗತಿ ಗೊತ್ತಾಗಿದೆ.
ಘಟನೆ ಸಂಬಂಧ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಯು ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಕಟ್ಟಡ ನಿರ್ಮಾಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಗೆ ದಿನಗೂಲಿ ಕೆಲಸಕ್ಕೆ ಬರುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಬಳಿಕ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದೆ. ಬಳಿಕ ಮದುವೆಯಾಗುವುದಿಲ್ಲ ಎಂದು ಹೇಳಿದ್ದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದ್ದು, ಅದಕ್ಕಾಗಿ ಆಕೆಯನ್ನು ಕೊಂದು ನೇಣು ಬಿಗಿದ ಸ್ಥಿತಿಯಲ್ಲಿ ಹಗ್ಗದಲ್ಲಿ ನೇತಾಡಿಸಿರುವುದಾಗಿ ವಿಚಾರಣೆ ವೇಳೆ ಆತ ಹೇಳಿದ್ದಾನೆ ಎಂದು ತಿಳಿದು ಬಂದಿದೆ.