ಬೆಂಗಳೂರು, ಸೆ 04 (DaijiworldNews/SM): ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವ ಕೆಲಸವು ಆಗದ ವಾತಾವರಣ ಇದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ನಲ್ಲಿ ತರಬೇತಿ ಪಡೆದು ಬಂದಿರುವ ಸಚಿವ ಬಿ.ಸಿ.ನಾಗೇಶ್ ಅವರು ರಾಜ್ಯ ಶಿಕ್ಷಣ ಸಚಿವರಾದಾಗಿನಿಂದ ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿದೆ. ಆ ಭ್ರಷ್ಟಾಚಾರದ ಕತೆಗಳು ಒಂದೊಂದಾಗಿ ಹೊರಬೀಳುತ್ತಿವೆ. ಪಠ್ಯಪುಸ್ತಕಗಳ ವಿವಾದದ ಮರೆಯಲ್ಲಿ ಇಲ್ಲಿ ನಡೆಯುತ್ತಿರುವುದು ಲಂಚಾವತಾರದ ಕುಣಿದಾಟ ಎಂದಿದ್ದಾರೆ, ಇವರು ಭಕ್ಷಣ ಸಚಿವರು ಎಂದು ಹ್ಯಾಶ್ ಟ್ಯಾಗ್ ಹಾಕಿ ಕಿಡಿ ಕಾಡಿದ್ದಾರೆ.
ಪ್ರಾರಂಭದಿಂದಲೇ ಶಿಕ್ಷಣ ಸಚಿವರು ಹಾಗೂ ಬಿಜೆಪಿ ವಿರುದ್ಧ ಕೇಳಿ ಬರುತ್ತಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಈಗ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಂಘಟನೆ ಪುರಾವೆಗಳನ್ನು ನೀಡಿದೆ. ಈ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿವೆ. ಪ್ರತಿ ಟ್ವೀಟ್ನಲ್ಲಿ ಇದು ಶಿಕ್ಷಣವೋ? ಭಕ್ಷಣೆಯೋ? ಎಂದು ಟ್ವೀಟ್ ಮಾಡಿದ್ದಾರೆ.