ಬೆಂಗಳೂರು, ಸೆ 07 (DaijiworldNews/MS): ದೊಡ್ಡಬಳ್ಳಾಪುರದಲ್ಲಿ ನಾಳೆ ನಡೆಯಬೇಕಾಗಿದ್ದ ಜನೋತ್ಸವ ಸಮಾವೇಶ ಭಾನುವಾರ ಸೆ.11 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸಚಿವ ಉಮೇಶ್ ಕತ್ತಿ ಅವರ ನಿಧನದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸರ್ಕಾರದ ಸಾಧನೆಗಳ ಬಗ್ಗೆ ಸಮಾವೇಶದ ಮೂಲಕ ಪ್ರಚಾರ ಪಡಿಸಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಮುಂಬರುವ 2023ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯ ಆರಂಭ ಎಂದೇ ಹೇಳಲಾಗುತ್ತಿತ್ತು. ಆದರೆ ಇದೀಗ ರಾಜ್ಯ ಸರ್ಕಾರದ ಸಾಧನಾ ಸಮಾವೇಶವಾದ ಜನೋತ್ಸವವನ್ನು ಸೆ.11 ಕ್ಕೆ ಮುಂದೂಡಲಾಗಿದೆ.
ಈ ಸಮಾವೇಶವನ್ನು ಈ ಹಿಂದೆ ಜು.28ರಂದು ನಡೆಸಲು ಉದ್ದೇಶಿಸಲಾಗಿತ್ತು. ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಸಮಾವೇಶವನ್ನು ಆ.28ಕ್ಕೆ ಮುಂದೂಡಲಾಗಿತ್ತು. ಬಳಿಕ ಸೆ.8ರಂದು ನಡೆಸಲು ತೀರ್ಮಾನಿಸಲಾಗಿತ್ತು.ಇದೀಗ ಮೂರನೇ ಬಾರಿ ಜನೋತ್ಸವವನ್ನು ಮುಂದೂಡಿದಂತಾಗಿದೆ.