ಕೋಲ್ಕತ್ತಾ, ಸೆ 13 (DaijiworldNews/DB): ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ದ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಹೌರಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಮಮತಾ ನೇತೃತ್ವದ ಟಿಎಂಸಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಹೌರಾದಲ್ಲಿ ಬೃಹತ್ ರ್ಯಾಲಿ ನಡೆಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದೇ ವೇಳೆ ಟಿಎಂಸಿ ನಾಯಕರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ರೈಲ್ವೇ ನಿಲ್ದಾಣ, ಹೌರಾ ಬ್ರಿಡ್ಜ್ ಮುಂತಾದೆಡೆ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದು, ವಿವಿಧೆಡೆಗಳಿಂದ ಆಗಮಿಸುತ್ತಿರುವ ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾರೆ. ಇದರಿಂದಾಗಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟವೂ ನಡೆದಿದೆ.
ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರವಾಯು ಸಿಡಿಸಿ, ಲಾಠಿಚಾರ್ಜ್ ಕೂಡಾ ಮಾಡಿದ್ದಾರೆ. ಕೆಲವರು ಪೊಲೀಸರ ಲಾಠಿಚಾರ್ಜ್ನಿಂದ ಕುಸಿದು ಬಿದ್ದಿದ್ದು, ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಜಟಿಲಗೊಂಡಿದೆ ಎನ್ನಲಾಗಿದೆ. ಸುವೆಂದು ಅಧಿಕಾರಿ, ರಾಹುಲ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ಇದೇ ವೇಳೆ ವಶಕ್ಕೆ ಪಡೆದಿದ್ದಾರೆ.